ನವದೆಹಲಿ, ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ವಿಶೇಷವಾಗಿ ಮಹತ್ವಕಾಂಕ್ಷೆ ಜಿಲ್ಲೆಗಳಾದ ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೈನುಗಾರಿಕೆ ಕ್ಷೇತ್ರದ ಸಮಗ್ರ ಅಭಿವೃದ್ಧಿ, ರೈತರ ಆದಾಯ ವೃದ್ಧಿ ಹಾಗೂ ಕೃಷಿ ಆಧಾರಿತ ಉದ್ಯೋಗಾವಕಾಶಗಳ ಸೃಷ್ಟಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ (NDDB) ಅಧ್ಯಕ್ಷರಾದ ಡಾ. ಮೀನೇಶ್ ಶಾ ಅವರನ್ನು ಭೇಟಿ ಸಂಸದರಾದ ಶ್ರೀ ಜಿ ಕುಮಾರ ನಾಯಕರವರು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದರು.ಈ ಚರ್ಚೆಯಲ್ಲಿ ಹೈನುಗಾರಿಕೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಹಾಲು ಉತ್ಪಾದಕರಿಗೆ ಆಧುನಿಕ ತಂತ್ರಜ್ಞಾನ ಮತ್ತು ತರಬೇತಿ ಸೌಲಭ್ಯಗಳನ್ನು ಒದಗಿಸುವುದು, ಹಾಲು ಸಂಗ್ರಹಣೆ ಹಾಗೂ ಸಂಸ್ಕರಣಾ ಮೂಲಸೌಕರ್ಯಗಳನ್ನು ವಿಸ್ತರಿಸುವ ಕುರಿತು ಸಮಾಲೋಚನೆ ಜೊತೆಗೆ, ರೈತರ ಆದಾಯ ಹೆಚ್ಚಳಕ್ಕೆ ಪೂರಕವಾಗುವ ರೀತಿಯಲ್ಲಿ ಮೌಲ್ಯವರ್ಧಿತ ಹೈನುಗಾರಿಕೆ ಉತ್ಪನ್ನಗಳ ಉತ್ಪಾದನೆಗೆ ಉತ್ತೇಜನ ನೀಡುವ ಅಗತ್ಯವನ್ನು ಒತ್ತಿಹೇಳಲಾಯಿತು.ಚರ್ಚೆಯ ವೇಳೆ ಡಾ. ಮೀನೇಶ್ ಶಾ ಅವರು ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ತೋಟಗಾರಿಕೆ ಮತ್ತು ಸಾವಯವ ಕೃಷಿಗೆ ಅಪಾರ ಅವಕಾಶಗಳಿದ್ದು, ಈ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸುವ ಮೂಲಕ ರೈತರಿಗೆ ಹೆಚ್ಚಿನ ಆದಾಯ ದೊರಕುವಂತೆ ಮಾಡಬಹುದು ವಿವರಿಸಿದರು. ರೈತ ಉತ್ಪಾದಕ ಸಂಸ್ಥೆಗಳ (FPO) ಬಲವರ್ಧನೆ, ಶೀತ ಸರಪಳಿ (Cold Chain) ವ್ಯವಸ್ಥೆಗಳ ಅಭಿವೃದ್ಧಿ ಹಾಗೂ ಕೃಷಿ ಉತ್ಪನ್ನಗಳ ಸಂಸ್ಕರಣಾ ಘಟಕಗಳ ಸ್ಥಾಪನೆಯ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಅಗತ್ಯವಿದೆ ಎಂದು ಸಂಸದರು ತಿಳಿಸಿದರು.ಸಣ್ಣ ಮತ್ತು ಅತಿಸಣ್ಣ ರೈತರು ತಮ್ಮ ಉತ್ಪನ್ನಗಳನ್ನು ನೇರವಾಗಿ ದೊಡ್ಡ ಮಾರುಕಟ್ಟೆಗಳಿಗೆ ತಲುಪಿಸಿ ನ್ಯಾಯಸಮ್ಮತ ಹಾಗೂ ಲಾಭದಾಯಕ ಬೆಲೆ ಪಡೆಯಲು ನೆರವಾಗುವ ಸಮಗ್ರ ಮಾರುಕಟ್ಟೆ ವೇದಿಕೆ ನಿರ್ಮಾಣದ ವಿಷಯವೂ ಪ್ರಮುಖವಾಗಿ ಚರ್ಚಿಸಲಾಯಿತು. ಇದರಿಂದ ಮಧ್ಯವರ್ತಿಗಳ ಹಸ್ತಕ್ಷೇಪ ಕಡಿಮೆಯಾಗುವುದರ ಜೊತೆಗೆ ರೈತರಿಗೆ ಹೆಚ್ಚಿನ ಆರ್ಥಿಕ ಲಾಭ ದೊರಕಲಿದೆ ಇದಲ್ಲದೆ, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಮಹಿಳಾ ಸ್ವಸಹಾಯ ಸಂಘಗಳು ಮತ್ತು ಯುವಕರನ್ನು ಹೈನುಗಾರಿಕೆ ಹಾಗೂ ಕೃಷಿ ಆಧಾರಿತ ಉದ್ಯಮಗಳಲ್ಲಿ ತೊಡಗಿಸಿಕೊಳ್ಳಲು ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ರೂಪಿಸುವುದು, ಹಾಲು ಉತ್ಪಾದಕರ ಸಹಕಾರ ಸಂಘಗಳನ್ನು ಬಲಪಡಿಸುವುದು ಹಾಗೂ ಹೊಸ ಉದ್ಯಮಶೀಲತಾ ಅವಕಾಶಗಳನ್ನು ಸೃಷ್ಟಿಸುವ ಕುರಿತು ಸಹ ಚರ್ಚೆ ನಡೆಯಿತು.ಈ ಭೇಟಿ ಕಲ್ಯಾಣ ಕರ್ನಾಟಕ ಪ್ರದೇಶದ ರೈತರು, ಹೈನುಗಾರರು ಹಾಗೂ ಕೃಷಿ ಆಧಾರಿತ ಉದ್ಯಮಿಗಳಿಗೆ ಹೊಸ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಸಂಸದರು ಅಧ್ಯಕ್ಷರಿಗೆ ಮನವರಿಕೆ ಮಾಡಿದರು.





Recent Comments