ಸಿಂಧನೂರು:ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ಕೈ ತಪ್ಪಿದ್ದರಿಂದ ಅವರ ಬೆಂಬಲಿಗರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ, ಹೈಕಮಾಂಡ್ ವಿರುದ್ದ ಆಕ್ರೋಶ ಹೊರ ಹಾಕಿದ ಘಟನೆ ನಡೆಯಿತು. ಎರಡನೇ ಹಂತದ ಸಚಿವ ಸಂಪುಟದ ನೂತನ ಸಚಿವರ ಪಟ್ಟಿಯಲ್ಲಿ ಹಂಪನಗೌಡ ಬಾದರ್ಲಿ ಅವರ ಹೆಸರು ಕೈಬಿಟ್ಟಿದ್ದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ನಗರದ ಗಾಂಧಿವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿ ಹೈಕಮಾಂಡ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಹಂಪನಗೌಡರ ಬೆಂಬಲಿಗ, ಜಿಲ್ಲಾ ಕೆಡಿಪಿ ಸದಸ್ಯ ಶಫಿವುಲ್ಲಾ ಖಾನ್ ಅವರು ತಮ್ಮ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು. ನಂತರ ಸ್ಥಳದಲ್ಲಿದ್ದ ಪೊಲೀಸರು ಪೆಟ್ರೋಲ್ ಬಾಟಲ್ ಕಸಿದು ಶಫೀವುಲ್ಲಾ ಖಾನ್ ಅವರನ್ನು ಸಮಾಧಾನಪಡಿಸಿದರು. ಸುಮಾರು ಒಂದು ಸಾವಿರಕ್ಕೂ ಹೆಚ್ಚು ಜನ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿಯೇ ಬೀಡು ಬಿಟ್ಟಿದ್ದರು. ಕೊನೆ ಹಂತದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರಿಂದ ಬೆಂಗಳೂರಿನ ಶಾಸಕರ ಭವನದ ಮುಂದೆ, ಶಾಸಕ ಹಂಪನಗೌಡ ಬಾದರ್ಲಿ ಎದುರು ಕಣ್ಣೀರು ಹಾಕಿ, ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಬುಗೌಡ ರಾಜೀನಾಮೆ:ಶಾಸಕ ಹಂಪನಗೌಡ ಬಾದರ್ಲಿಗೆ ಸಚಿವ ಸ್ಥಾನ ತಪ್ಪಿದ ಹಿನ್ನಲೆಯಲ್ಲಿ ಅವರ ಸಹೋದರನ ಪುತ್ರ ಬಾಬುಗೌಡ ಬಾದರ್ಲಿ ಸುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಜಿಲ್ಲಾಧಿಕಾರಿಗಳಿಗೆ ಬರೆದ ರಾಜೀನಾಮೆ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಬಾಬುಗೌಡರಿಗೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಶಾಸಕ ಹಂಪನಗೌಡರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.






Recent Comments