ರಾಯಚೂರು: ಜಿಲ್ಲೆಯ ಸಾರ್ವಜನಿಕರಿಗೆ ಬೇಸಿಗೆ ವೇಳೆಯಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗದಂತೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.
“ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದರೆ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು. ಸ್ಥಳೀಯ ಅನುದಾನ ಬಳಸಿಕೊಂಡು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸಾರ್ವಜನಿಕರ ದೂರುಗಳಿಗೆ ಸ್ಪಂದನೆ ವೇಗವಾಗಿ ಇರಬೇಕು,” ಎಂದು ಅವರು ಸೂಚಿಸಿದರು.
ಇದನ್ನೂ ಓದಿ: ಸ್ಟಾರ್ಟ್‌ಅಪ್ ಚಳವಳಿಗೆ ಕಾರ್ಯಾಗಾರದ ಮೂಲಕ ವೇಗ: ಸಚಿವ ಬೋಸರಾಜು
ಜಿಲ್ಲೆಯಲ್ಲಿನ ನೀರಿನ ಸಮಸ್ಯೆಯ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿ, ಕೆರೆಗಳನ್ನು ತುಂಬಿಸುವ ಕಾರ್ಯವನ್ನು ತಕ್ಷಣ ಆರಂಭಿಸಬೇಕು. ಈ ಹೊಣೆಗಾರಿಕೆ ತಹಶೀಲ್ದಾರ್, ತಾಲೂಕು ಪಂಚಾಯತ್ ಇಓ ಹಾಗೂ ಸಂಬಂಧಪಟ್ಟ ಅಧಿಕಾರಿಗಳದ್ದಾಗಿದೆ ಎಂದು ತಿಳಿಸಿದರು.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 17.26 ಟಿಎಂಸಿ ನೀರು ಸಂಗ್ರಹವಿದ್ದು, 200 ಕ್ಯೂಸೆಕ್ ಒಳಹರಿವು ಇರುವುದರಿಂದ ಸಿಂಧನೂರು, ಮಾನ್ವಿ ಹಾಗೂ ರಾಯಚೂರು ತಾಲೂಕಿನ ಗ್ರಾಮಗಳಿಗೆ ನೀರು ಪೂರೈಸಲು ಸಾಧ್ಯವಿದೆ ಎಂದು ವಿವರಿಸಿದರು.
ಜಿಲ್ಲೆಯಲ್ಲಿ ಒಟ್ಟು 782 ಆರ್‌ಒ ಘಟಕಗಳಿದ್ದು, 589 ಕಾರ್ಯನಿರ್ವಹಿಸುತ್ತಿವೆ. ಉಳಿದ ಘಟಕಗಳನ್ನು ಶೀಘ್ರದಲ್ಲೇ ಆರಂಭಿಸಲು ಸೂಚನೆ ನೀಡಿದರು. ಪ್ರತಿ ಘಟಕದ ದುರಸ್ತಿಗೆ 50 ಸಾವಿರ ರೂಪಾಯಿ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ ಎಂದರು.
ಈ ವೇಳೆ ಶಾಸಕ ಡಾ. ಶಿವರಾಜ ಪಾಟೀಲ್ ಮಾತನಾಡಿ, ಕಳೆದ ಬಾರಿ ಟ್ಯಾಂಕರ್ ಹಾಗೂ ಬೋರ್‌ವೆಲ್‌ಗಳ ಬಾಡಿಗೆ ಬಾಕಿ ಇರುವುದರಿಂದ ಗ್ರಾಮಗಳಲ್ಲಿ ಸಮಸ್ಯೆ ಉಂಟಾಗಿದೆ. ಬಾಕಿ ಹಣವನ್ನು ತಕ್ಷಣ ಪಾವತಿಸಬೇಕು ಎಂದು ಒತ್ತಾಯಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಈಶ್ವರ್ ಕುಮಾರ್ ಕಾಂದೂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.




Recent Comments