Friday, June 5, 2026
Google search engine
HomeBlogಮಾನವ ಅಭಿವೃದ್ಧಿ ಸೂಚ್ಯಂಕ ಕುಸಿತ: ಮೇ 24ರಂದು ದುಂಡು ಮೇಜಿನ ಸಭೆ

ಮಾನವ ಅಭಿವೃದ್ಧಿ ಸೂಚ್ಯಂಕ ಕುಸಿತ: ಮೇ 24ರಂದು ದುಂಡು ಮೇಜಿನ ಸಭೆ

ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ತಾಲೂಕುಗಳ ಮಾನವ ಅಭಿವೃದ್ಧಿ ಸೂಚ್ಯಂಕ ರಾಜ್ಯದ ಇತರೆ ಭಾಗಗಳಿಗೆ ಹೋಲಿಸಿದರೆ ಹಿಂದುಳಿದ ಸ್ಥಿತಿಯಲ್ಲಿದ್ದು, ಈ ಕುರಿತು ಗಂಭೀರ ಚರ್ಚೆ ಅಗತ್ಯವಾಗಿದೆ ಎಂದು ಹೈದ್ರಾಬಾದ್ ಕರ್ನಾಟಕ ಜನಾಂದೋಲನ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಕುಷ್ಟಗಿ ಅಭಿಪ್ರಾಯಪಟ್ಟರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 24ರಂದು ನಗರದ ಕೊಠಾರಿ ಫಂಕ್ಷನ್ ಹಾಲ್‌ನಲ್ಲಿ ಬೆಳಿಗ್ಗೆ 10 ಗಂಟೆಗೆ ದುಂಡು ಮೇಜಿನ ಸಭೆ, 371ಜೆ ಹೋರಾಟಗಾರರ ಸಮಾವೇಶ ಹಾಗೂ ಕಲ್ಯಾಣ ಕರ್ನಾಟಕ ವಿಕಾಸ ವೇದಿಕೆ ಸ್ಥಾಪನಾ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಂದ ತಲಾ 25 ಮಂದಿ ಹೋರಾಟಗಾರರು ಭಾಗವಹಿಸಲಿದ್ದು, ಸಚಿವರು, ಶಾಸಕರು ಹಾಗೂ ವಿವಿಧ ಜನಪ್ರತಿನಿಧಿಗಳೂ ಭಾಗಿಯಾಗಲಿದ್ದಾರೆ ಎಂದರು.

ನಂಜುಂಡಪ್ಪ ವರದಿ ಜಾರಿಯಾಗಿ 24 ವರ್ಷ ಕಳೆದಿದ್ದರೂ ಪ್ರದೇಶದ ಅಭಿವೃದ್ಧಿ ನಿರೀಕ್ಷಿತ ಮಟ್ಟ ತಲುಪಿಲ್ಲ. 371ಜೆ ವಿಶೇಷ ಮೀಸಲಾತಿಗಾಗಿ ನಡೆದ ಹೋರಾಟದ ಫಲವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಸ್ಥಾಪನೆಯಾಗಿ ಪ್ರತಿ ವರ್ಷ ಸಾವಿರಾರು ಕೋಟಿ ಅನುದಾನ ಬಿಡುಗಡೆಯಾಗುತ್ತಿದೆ. ಆದರೂ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರೀಕ್ಷಿತ ಪ್ರಗತಿ ಕಾಣಿಸುತ್ತಿಲ್ಲ ಎಂದು ದೂರಿದರು.

ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನವನ್ನು ವಿಮಾನ ನಿಲ್ದಾಣ ಮತ್ತು ಬಸ್ ಖರೀದಿ ಸೇರಿದಂತೆ ಬೇರೆ ಕಾಮಗಾರಿಗಳಿಗೆ ಬಳಸಲಾಗುತ್ತಿದ್ದು, ಜನಜೀವನ ಸುಧಾರಿಸುವ ಯೋಜನೆಗಳಿಗೆ ಸಮರ್ಪಕವಾಗಿ ಬಳಸಲಾಗುತ್ತಿಲ್ಲ ಎಂದು ಆರೋಪಿಸಿದರು.

ಈ ಎಲ್ಲಾ ವಿಚಾರಗಳ ಕುರಿತು ಸಾರ್ವಜನಿಕ ಚರ್ಚೆ ಹುಟ್ಟುಹಾಕುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಹೋರಾಟಗಾರರು, ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಚಾಮರಸ ಮಾಲೀಪಾಟೀಲ್, ಹರವಿ ನಾಗನಗೌಡ, ವೀರಣ್ಣ ಭಂಡಾರಿ, ಜಾನ್ ವೆಸ್ಲಿ, ಬಿ. ಬಸವರಾಜ, ಬೂದೆಪ್ಪ, ಆರ್. ಬಸವರಾಜ್, ಚಂದ್ರಶೇಖರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments