ರಾಯಚೂರು: ಲಿಂಗಸುಗೂರು ಪಟ್ಟಣದ ವ್ಯಾಪ್ತಿಯ ಜಮೀನಿಗೆ ವಿನ್ಯಾಸ ನಕ್ಷೆ ಅನುಮೋದನೆಗಾಗಿ ₹3.60 ಲಕ್ಷ ಲಂಚ ಬೇಡಿಕೆ ಇಟ್ಟಿರುವ ಆರೋಪಕ್ಕೆ ಸಂಬಂಧಿಸಿದಂತೆ ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ/ಸಹಾಯಕ ನಿರ್ದೇಶಕರಾದ ಶರಣಪ್ಪ ಅವರನ್ನು ಸರ್ಕಾರ ಅಮಾನತ್ತುಗೊಳಿಸಿದೆ.
ಈ ಕುರಿತು ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿರುವುದು ಹಾಗೂ ಸ್ಥಳೀಯ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವುದನ್ನು ಉಲ್ಲೇಖಿಸಲಾಗಿದೆ. ಪ್ರಕರಣದ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಲಿಂಗಸುಗೂರು ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾಗಿ ಅಧಿಕ ಪ್ರಭಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವಧಿಯಲ್ಲಿ ಶರಣಪ್ಪ ಅವರು ಸರ್ಕಾರಿ ನೌಕರರಿಗೆ ತಕ್ಕದ್ದಲ್ಲದ ರೀತಿಯಲ್ಲಿ ವರ್ತಿಸಿದ್ದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಗುತ್ತಿಗೆ ಕಾರ್ಮಿಕರ ಜಿಲ್ಲಾ ಸಮಾವೇಶ ಯಶಸ್ವಿಗೊಳಿಸಲು TUCI ಕರೆ: ಏಪ್ರಿಲ್ 24ರಂದು ರಾಯಚೂರಿನಲ್ಲಿ ಸಮಾವೇಶ
ಈ ನಡೆ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು–2021ರ ವಿವಿಧ ನಿಯಮಗಳನ್ನು ಉಲ್ಲಂಘಿಸುವಂತಿದ್ದು, ಕರ್ತವ್ಯಲೋಪ ಎಸಗಿರುವುದಾಗಿ ಪ್ರಾಥಮಿಕವಾಗಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು–1957ರ ನಿಯಮ 10(1)(ಡಿ) ಅನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಗೊಳಿಸಿ, ನಗರಾಭಿವೃದ್ಧಿ ಇಲಾಖೆಯ ಅಭಿವೃದ್ಧಿ ಪ್ರಾಧಿಕಾರ ಹಾಗೂ ನಗರ ಯೋಜನಾ ಸೇವೆ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿ ಲತಾ.ಕೆ ಆದೇಶ ಹೊರಡಿಸಿದ್ದಾರೆ.




Recent Comments