Saturday, August 8, 2026
Google search engine
Homeರಾಜ್ಯNHAI ಅಧಿಕಾರಿಗಳೊಂದಿಗೆ ಸಂಸದ ಜಿ. ಕುಮಾರ ನಾಯಕ ಸಭೆ: ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳ ವಿರುದ್ಧ ಗರಂ

NHAI ಅಧಿಕಾರಿಗಳೊಂದಿಗೆ ಸಂಸದ ಜಿ. ಕುಮಾರ ನಾಯಕ ಸಭೆ: ಕಾಮಗಾರಿ ವಿಳಂಬಕ್ಕೆ ಅಧಿಕಾರಿಗಳ ವಿರುದ್ಧ ಗರಂ

ರಾಯಚೂರು.ಆ.೮-ಇಂದು ಶನಿವಾರ ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕೈಗೆತ್ತಿಕೊಂಡಿರುವ ವಿವಿಧ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತು ಇಂದು ಸಂಸದರ ಕಾರ್ಯಾಲಯದಲ್ಲಿ ಸಂಸದರಾದ ಜಿ. ಕುಮಾರ ನಾಯಕರವರು ಎನ್‌ಎಚ್‌ಎಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ತಮ್ಮ ಲೋಕಸಭಾ ಕ್ಷೇತ್ರದ ವ್ಯಾಪ್ತಿ ಪ್ರಮುಖ ಸಂಪರ್ಕ ರಸ್ತೆಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಭಾರತಮಾಲಾ ಯೋಜನೆಯ ಪ್ಯಾಕೇಜ್–3 ಮತ್ತು 4 ಹಾಗೂ ಹುನುಗುಂದ–ರಾಯಚೂರು ಚತುಷ್ಪಥ ಹೆದ್ದಾರಿ ಪ್ಯಾಕೇಜ್–5 ಮತ್ತು 6 ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿನೆ ನಡೆಸಿದರು,ಕಾಮಗಾರಿ ಪ್ರಾರಂಭವಾಗಿ ಹಲವು ವರ್ಷಗಳು ಕಳೆದಿದ್ದರೂ ಇನ್ನೂ ಪೂರ್ಣಗೊಳ್ಳದಿರುವುದಕ್ಕೆ ಸಂಸದರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಾರ್ವಜನಿಕರು ಹಾಗೂ ವಾಹನ ಸವಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಕಾರಣಕ್ಕೂ ಕಾಮಗಾರಿಗಳನ್ನು ಅನಗತ್ಯವಾಗಿ ವಿಳಂಬ ಮಾಡಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಅದೇ ರೀತಿ ಹೆದ್ದಾರಿ ಕಾಮಗಾರಿಗಳ ಸಂದರ್ಭದಲ್ಲಿ ಸ್ಥಳೀಯ ಜನರಿಗೆ ಮತ್ತು ರೈತರಿಗೆ ಆಗುತ್ತಿರುವ ತೊಂದರೆಗಳನ್ನು ನಿವಾರಿಸಲು ಅಗತ್ಯವಿರುವ ಕಡೆಗಳಲ್ಲಿ ಸರ್ವಿಸ್ ರಸ್ತೆ, ಅಂಡರ್‌ಪಾಸ್ ಹಾಗೂ ಸುರಕ್ಷಿತ ಸಂಪರ್ಕ ಮಾರ್ಗಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ರೈತರು ತಮ್ಮ ಜಮೀನುಗಳಿಗೆ ಸುಲಭವಾಗಿ ತೆರಳಲು ಹಾಗೂ ಕೃಷಿ ಚಟುವಟಿಕೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಯೋಜನೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.ಹೆದ್ದಾರಿ ಕಾಮಗಾರಿಗಳಿಂದಾಗಿ ಗ್ರಾಮೀಣ ಪ್ರದೇಶಗಳ ಸಂಪರ್ಕ ಕಡಿತಗೊಳ್ಳದಂತೆ ಸ್ಥಳೀಯ ಅಗತ್ಯಗಳನ್ನು ಪರಿಗಣಿಸಬೇಕು. ಶಾಲೆಗಳು, ಗ್ರಾಮಗಳು, ಕೃಷಿ ಜಮೀನುಗಳು ಹಾಗೂ ಪ್ರಮುಖ ಸಂಪರ್ಕ ಸ್ಥಳಗಳ ಬಳಿ ಸಾರ್ವಜನಿಕರ ಸುರಕ್ಷತೆಗೆ ಅಗತ್ಯವಿರುವ ಅಂಡರ್‌ಪಾಸ್ ಮತ್ತು ಇತರೆ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸುವ ಕುರಿತು ಸಹ ಅಧಿಕಾರಿಗಳೊಂದಿಗೆ ಸಮಗ್ರವಾಗಿ ಚರ್ಚಿಸಿದರು.ಕಾಮಗಾರಿಗಳಲ್ಲಿ ಎದುರಾಗಿರುವ ತಾಂತ್ರಿಕ ಹಾಗೂ ಭೂಸ್ವಾಧೀನ ಸೇರಿದಂತೆ ಯಾವುದೇ ಸಮಸ್ಯೆಗಳಿದ್ದರೆ ಅವುಗಳನ್ನು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ತ್ವರಿತವಾಗಿ ಪರಿಹರಿಸಬೇಕು. ಕಾಮಗಾರಿಗಳ ಪ್ರಗತಿಯನ್ನು ನಿಯಮಿತವಾಗಿ ಪರಿಶೀಲಿಸಿ, ವಿಳಂಬವಾಗದಂತೆ ಕಾರ್ಯಯೋಜನೆ ರೂಪಿಸುವಂತೆ ಸಂಸದರು ಸೂಚಿಸಿದರು.ರಾಯಚೂರು ಲೋಕಸಭಾ ಕ್ಷೇತ್ರದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸುವುದು ಹಾಗೂ ರೈತರು ಮತ್ತು ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ತಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಸಂಸದ ಜಿ. ಕುಮಾರ ನಾಯಕ ಹೇಳಿದರು.ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಮುಖ್ಯ ಇಂಜಿನಿಯರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular

Recent Comments