ರಾಯಚೂರು: ಹಿರಿಯ ಕಾಂಗ್ರೆಸ್ ಮುಖಂಡ ಎನ್.ಎಸ್. ಭೋಸರಾಜು ಅವರಿಗೆ ಮುಂದಿನ ಸಚಿವ ಸಂಪುಟದಲ್ಲಿಯೂ ಸಚಿವ ಸ್ಥಾನ ನೀಡಬೇಕು ಎಂದು ಎನ್.ಎಸ್. ಭೋಸರಾಜು ಅಭಿಮಾನಿಗಳ ಸಂಘ (ರಿ), ಕರ್ನಾಟಕದ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಂದೇನವಾಜು ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ಎನ್.ಎಸ್. ಭೋಸರಾಜು ಅವರು ಕಳೆದ ಐವತ್ತು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಹಗಲು-ರಾತ್ರಿ ಎನ್ನದೆ ಸೇವೆ ಸಲ್ಲಿಸಿದ್ದು, ಅವರ ಪಕ್ಷನಿಷ್ಠೆ ಹಾಗೂ ಸಂಘಟನಾ ಸಾಮರ್ಥ್ಯವನ್ನು ಪರಿಗಣಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.
ಸಚಿವರಾಗಿದ್ದ ಅವಧಿಯಲ್ಲಿ ರಾಜ್ಯಾದ್ಯಂತ ಚೆಕ್ ಡ್ಯಾಂಗಳು, ಬ್ರಿಜ್-ಕಮ್-ಬ್ಯಾರೇಜ್‌ಗಳು, ಕೊಳವೆಬಾವಿಗಳು ಸೇರಿದಂತೆ ರೈತರು ಹಾಗೂ ಬಡವರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದು, ಅಂತರ್ಜಲ ಸಂರಕ್ಷಣೆಗೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೆ, ರಾಯಚೂರು ಜಿಲ್ಲೆಗೆ ನೂರಾರು ಕೋಟಿ ರೂಪಾಯಿ ಅನುದಾನ ತಂದು ಮಾವಿನಕೆರೆ ನಿರ್ಮಾಣ, ರಾಜ್ಯ ಹೆದ್ದಾರಿ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ವಿವಿಧ ಸಮುದಾಯಗಳಿಗೆ ಸಮುದಾಯ ಭವನಗಳ ನಿರ್ಮಾಣ ಸೇರಿದಂತೆ ಜನಪರ ಅಭಿವೃದ್ಧಿ ಕಾರ್ಯಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದಾರೆ ಎಂದು ಪ್ರಶಂಸಿಸಿದ್ದಾರೆ.
ಈ ಎಲ್ಲ ಅಭಿವೃದ್ಧಿ ಕಾರ್ಯಗಳಿಂದ ಕಾಂಗ್ರೆಸ್ ಸರ್ಕಾರವನ್ನು ಜನರು ಸ್ಮರಿಸುವಂತಾಗಿದೆ. ಆದ್ದರಿಂದ ಮುಂದಿನ ಎರಡು ವರ್ಷಗಳ ಅವಧಿಗೂ ಎನ್.ಎಸ್. ಭೋಸರಾಜು ಅವರಿಗೆ ಸಚಿವ ಸ್ಥಾನ ನೀಡಿದರೆ ರಾಜ್ಯದಾದ್ಯಂತ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಲಿದ್ದು, ಕಾಂಗ್ರೆಸ್ ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಹೀಗಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ರಚನೆಯಾಗುವ ಸಚಿವ ಸಂಪುಟದಲ್ಲಿ ಎನ್.ಎಸ್. ಭೋಸರಾಜು ಅವರಿಗೆ ಸಚಿವ ಸ್ಥಾನ ನೀಡುವಂತೆ ಸರ್ಕಾರವನ್ನು ಒತ್ತಾಯಿಸುವುದಾಗಿ ಬಂದೇನವಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




Recent Comments