ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಪಟ್ಟ? ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಚರ್ಚೆಯಲ್ಲಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿರುವ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಾಳೆ (ಗುರುವಾರ) ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಉಪಹಾರ ಸಭೆ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್(D. K. Shivakumar) ಅವರ ದೆಹಲಿ ಪ್ರವಾಸದ ವೇಳಾಪಟ್ಟಿಯಲ್ಲೂ ಕೊನೆಯ ಕ್ಷಣದಲ್ಲಿ ಬದಲಾವಣೆ ಕಂಡುಬಂದಿದೆ. ಇಂದು ಮಧ್ಯಾಹ್ನ ಬೆಂಗಳೂರಿಗೆ ವಾಪಸ್ ಆಗಬೇಕಿದ್ದ ಡಿಕೆ ಶಿವಕುಮಾರ್, ಇದೀಗ ನಾಳೆ ಮುಂಜಾನೆ ದೆಹಲಿಯಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿ ಸಿಎಂ ಅಧಿಕೃತ ನಿವಾಸದಲ್ಲಿ ನಡೆಯಲಿರುವ ಉಪಹಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಡಿಕೆ ಶಿವಕುಮಾರ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆಗಳ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ನಾಳೆಯ ಉಪಹಾರ ಸಭೆ ಕೇವಲ ಸೌಜನ್ಯದ ಭೇಟಿಯೇ ಅಥವಾ ಅಧಿಕಾರ ಹಸ್ತಾಂತರದ ಕುರಿತು ಅಂತಿಮ ಚರ್ಚೆಯೇ ಎಂಬ ಪ್ರಶ್ನೆಗಳು ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿವೆ.
ಮಂಗಳವಾರ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರಕ್ಕೆ ಸಮ್ಮತಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ರಾಜ್ಯಸಭಾ ಸ್ಥಾನ ಸೇರಿದಂತೆ ಪಕ್ಷದ ಕೇಂದ್ರ ರಾಜಕಾರಣದಲ್ಲಿ ಸಿದ್ದರಾಮಯ್ಯ ಅವರಿಗೆ ಪ್ರಮುಖ ಜವಾಬ್ದಾರಿ ನೀಡುವ ಚರ್ಚೆಯೂ ನಡೆದಿರುವುದಾಗಿ ತಿಳಿದುಬಂದಿದೆ. ಆದರೆ ಕೇಂದ್ರ ರಾಜಕಾರಣಕ್ಕೆ ತಕ್ಷಣ ತೆರಳುವ ಕುರಿತು ಸಿದ್ದರಾಮಯ್ಯ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗುತ್ತಿದೆ.
ಇದೇ ವೇಳೆ ಸಚಿವ Satish Jarkiholi ಕೂಡ ದೆಹಲಿಯಲ್ಲೇ ಉಳಿದುಕೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಮತ್ತಷ್ಟು ಚರ್ಚೆ ನಡೆಸುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಿದರೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.
ಪದತ್ಯಾಗದ ಚರ್ಚೆಗಳ ಮಧ್ಯೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಮೂರು ವರ್ಷದ ಸಾಧನೆಗಳನ್ನು ನೆನಪಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ರಾಜ್ಯದ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದು ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದೇವೆ. ಚುನಾವಣೆಗೆ ಮುನ್ನ ನೀಡಿದ ಭರವಸೆಗಳನ್ನು ನುಡಿದಂತೆ ನಡೆದು ಜಾರಿಗೆ ತಂದ ಹೆಮ್ಮೆ ನಮ್ಮದು” ಎಂದು ತಿಳಿಸಿದ್ದಾರೆ.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಜಾರಿಯ ಬಗ್ಗೆ ಪ್ರಸ್ತಾಪಿಸಿದ ಸಿಎಂ, ಅನ್ನಭಾಗ್ಯ ಯೋಜನೆಯಡಿ ಇದುವರೆಗೆ 18,897 ಕೋಟಿ ರೂ. ವೆಚ್ಚ ಮಾಡಲಾಗಿದ್ದು, 4.26 ಕೋಟಿ ಪಡಿತರದಾರರಿಗೆ ಉಚಿತ ಆಹಾರಧಾನ್ಯ ವಿತರಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಈ ವೇಗದ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರದ ಭವಿಷ್ಯ ಹಾಗೂ ಮುಂದಿನ ನಾಯಕತ್ವದ ಬಗ್ಗೆ ಹೊಸ ಲೆಕ್ಕಾಚಾರಗಳಿಗೆ ಕಾರಣವಾಗಿವೆ. ನಾಳೆಯ ಉಪಹಾರ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಘೋಷಣೆಗಳು ಹೊರಬೀಳುವ ಸಾಧ್ಯತೆ ಇದೆ.




Recent Comments